ಉಜಿರೆ: ಎಸ್ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ











ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2026–27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮವನ್ನು ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರಶಾಂತ್ ಬಿ. ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆ ಸದೃಢ ದೇಶ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಮಾಜದೊಂದಿಗೆ ಬೆರೆತು ಸೇವಾ ಮನೋಭಾವ ಬೆಳೆಸಿಕೊಳ್ಳುವುದರ ಮೂಲಕ ತಮ್ಮ ಭವಿಷ್ಯದ ಬದುಕನ್ನು ಅರ್ಥಪೂರ್ಣವಾಗಿ ರೂಪಿಸಿಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಹಿಸಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ಸದೃಢ ಯುವಜನತೆಯನ್ನು ರೂಪಿಸುವ ಶಕ್ತಿಯುತ ವೇದಿಕೆಯಾಗಿದೆ. ಆರೋಗ್ಯವಂತ ಹಾಗೂ ಜವಾಬ್ದಾರಿಯುತ ರಾಷ್ಟ್ರ ನಿರ್ಮಾಣದಲ್ಲಿ ಎನ್ಎಸ್ಎಸ್ನ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯ ಮೂಲಕ ಸ್ವಯಂಸೇವಕರು ಪಡೆಯುವ ಅನುಭವಗಳು ಅವರ ಮುಂದಿನ ಜೀವನಕ್ಕೆ ಭದ್ರ ಅಡಿಪಾಯವಾಗಲಿವೆ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ ಹಿರಿಯ ಸ್ವಯಂಸೇವಕ ಸುದರ್ಶನ್ ನಾಯಕ್ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 97.6 ಅಂಕಗಳನ್ನು ಪಡೆದ ಸ್ವಯಂಸೇವಕಿ ಗ್ರಂಥ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ವಿಶ್ವನಾಥ್ ಎಸ್., ಸಹ ಯೋಜನಾಧಿಕಾರಿ ಶೋಭಾ ಪಿ., ಸಲಹಾ ಸಮಿತಿ ಸದಸ್ಯರಾದ ನಾಗರಾಜ್ ಭಂಡಾರಿ, ಪ್ರಸನ್ನ ಕುಮಾರ್ ಐತಾಳ್, ಕನ್ನಡ ಉಪನ್ಯಾಸಕ ಸುಭಾಸ್ ರಾವ್ ಬೋಳೂರು ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಎನ್ಎಸ್ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.
ಘಟಕ ನಾಯಕಿ ನವನೀತು ಸ್ವಾಗತಿಸಿದರು. ಸ್ವಯಂಸೇವಕಿ ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು. ಘಟಕ ನಾಯಕ ವಿಶ್ವಾಸ್ ವಂದಿಸಿದರು.


















Leave a Reply